ಬೆಂಗಳೂರು: ರಾಷ್ಟ್ರೀಯ ಕೈಮಗ್ಗ ದಿನದ ಅಂಗವಾಗಿ ಬಿಜೆಪಿ ನೇಕಾರ ಪ್ರಕೋಷ್ಠದ ವತಿಯಿಂದ ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ನೇಕಾರ ಸಮುದಾಯದ ಪ್ರಮುಖರು ಭಾಗವಹಿಸಿ, ಸಾಧಕ ನೇಕಾರರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ನೇಕಾರ ಸಮುದಾಯವು ದೇಶದ ಸಾಂಸ್ಕೃತಿಕ ಪರಂಪರೆಯನ್ನು ಜೀವಂತವಾಗಿಡುವ ಜೊತೆಗೆ ತಮ್ಮ ಕಾಯಕ ನಿಷ್ಠೆಯ ಮೂಲಕ ದೇಶದ ಆರ್ಥಿಕ ಪ್ರಗತಿಗೂ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ನೇಕಾರರ ಹಿತರಕ್ಷಣೆ ಹಾಗೂ ಅವರ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ತಂದೆಯಿಂದ ಮಗನಿಗೆ, ಪೀಳಿಗೆಯಿಂದ ಪೀಳಿಗೆಗೆ ಸಾಗುತ್ತಿರುವ ಕೈಮಗ್ಗ ಕಾಯಕದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಕಲಾತ್ಮಕತೆಯ ಸೊಗಡು ಅಡಗಿದೆ. ಪ್ರತಿಯೊಂದು ನೂಲಿನಲ್ಲೂ ಭಾರತೀಯತೆಯ ಜೀವಂತಿಕೆ ಮತ್ತು ನೇಕಾರರ ಶ್ರಮದ ಪ್ರತಿಬಿಂಬವಿದೆ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್’ ಕರೆಗೆ ಸ್ಪಂದಿಸಿ, ದೇಶೀಯ ಕೈಮಗ್ಗ ಉತ್ಪನ್ನಗಳನ್ನು ಹೆಚ್ಚು ಪ್ರೋತ್ಸಾಹಿಸಬೇಕು. ಸ್ಥಳೀಯ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ಮೂಲಕ ನೇಕಾರ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ.ಎಸ್. ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ದತ್ತಾತ್ರಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಹಲವು ಪ್ರಮುಖ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ನೇಕಾರ ಸಮುದಾಯದ ಪ್ರತಿನಿಧಿಗಳು ಭಾಗವಹಿಸಿದ್ದರು.











