ಸದನದ ಒಳಗೂ, ಹೊರಗೂ ಬಿಜೆಪಿ–ಜೆಡಿಎಸ್ ಹೋರಾಟ; ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ
ಬೆಂಗಳೂರು: ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಎದುರಿಸಿ ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ.
ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸದನದಲ್ಲಿ ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದಾರೆ. ಇದೇ ವಿಚಾರವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಬಿಜೆಪಿ ಕಾರ್ಯಕರ್ತರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
“ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಅನಿವಾರ್ಯತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಏಕೆ ಬಂತು? ನಾಗೇಂದ್ರ ಅವರ ಬಗ್ಗೆ ಮುಖ್ಯಮಂತ್ರಿಗಳಿಗೆ ಭಯವೇ?” ಎಂದು ಅವರು ಪ್ರಶ್ನಿಸಿದರು.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣದ ದುರುಪಯೋಗದ ಗಂಭೀರ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಸರ್ಕಾರದ ದಲಿತ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ಕಾಳಜಿಯನ್ನೇ ಪ್ರಶ್ನಿಸುವಂತಾಗಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದ ಕುರಿತು ಈ ಹಿಂದೆ ವಿಧಾನಮಂಡಲದ ಸದನದಲ್ಲೇ ಸುದೀರ್ಘ ಚರ್ಚೆ ನಡೆದಿದ್ದು, ಅದರ ಬಳಿಕ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿತ್ತು. ಇದೀಗ ಮತ್ತೆ ಅದೇ ವ್ಯಕ್ತಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಅವರು ಪ್ರಶ್ನಿಸಿದರು.
“ಅಂದಿನಿಂದ ಇಂದಿನವರೆಗೆ ನಾಗೇಂದ್ರ ಅವರ ವಿರುದ್ಧದ ಆರೋಪಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರಕರಣದಲ್ಲಿ ಚಾರ್ಜ್‌ಶೀಟ್ ಕೂಡ ಸಲ್ಲಿಕೆಯಾಗಿದೆ. ಅವರು ನಿರಪರಾಧಿ ಎಂದು ಸಾಬೀತಾಗಿಲ್ಲ. ಕಾನೂನುಬದ್ಧವಾಗಿ ಅವರು ನಿರಪರಾಧಿ ಎಂದು ಸಾಬೀತಾದರೆ ಅವರನ್ನು ಸಚಿವರನ್ನಾಗಿ ಮಾತ್ರವಲ್ಲ, ಮುಖ್ಯಮಂತ್ರಿಯನ್ನಾಗಿಯೇ ಮಾಡಿದರೂ ನಮ್ಮ ಅಭ್ಯಂತರವಿಲ್ಲ. ಆದರೆ ಆರೋಪಗಳಿಂದ ಮುಕ್ತರಾಗಿರುವುದು ಸಾಬೀತಾಗುವವರೆಗೆ ಅವರನ್ನು ಸಚಿವ ಸಂಪುಟದಲ್ಲಿ ಮುಂದುವರಿಸುವುದನ್ನು ಒಪ್ಪುವುದಿಲ್ಲ,” ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
ಪ್ರಕರಣದಲ್ಲಿ ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ, ಹಣದ ದುರುಪಯೋಗ ಹಾಗೂ ಚಿನ್ನ ಖರೀದಿಗೆ ಸಂಬಂಧಿಸಿದ ಆರೋಪಗಳು ಸಾರ್ವಜನಿಕವಾಗಿ ಚರ್ಚೆಯಾಗಿವೆ. ಈ ಕುರಿತು ಜಾರಿ ನಿರ್ದೇಶನಾಲಯದ ಪತ್ರಿಕಾ ಪ್ರಕಟಣೆಯಲ್ಲೂ ಹಣದ ದುರುಪಯೋಗಕ್ಕೆ ಸಂಬಂಧಿಸಿದ ಉಲ್ಲೇಖಗಳಿವೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ, ಕೆಪಿಎಸ್‌ಸಿ ಅಕ್ರಮ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳಿದ್ದು, ಅವುಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆಯಾಗಬೇಕಿದೆ. ಆದರೆ ಸರ್ಕಾರ ನಾಗೇಂದ್ರ ಅವರ ವಿಚಾರದಲ್ಲೇ ಸದನದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬಾರದು ಎಂದು ವಿಜಯೇಂದ್ರ ಆಗ್ರಹಿಸಿದರು.
“ಮುಖ್ಯಮಂತ್ರಿ ಅವರು ಹಠಮಾಡದೆ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು. ಅವರನ್ನು ಸಂಪುಟದಿಂದ ಕೈಬಿಡುವವರೆಗೆ ಸದನದ ಒಳಗೂ, ಹೊರಗೂ ಬಿಜೆಪಿ ತನ್ನ ಹೋರಾಟ ಮುಂದುವರಿಸಲಿದೆ. ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಕೂಡ ಅನಿರ್ದಿಷ್ಟಾವಧಿಗೆ ಮುಂದುವರಿಯಲಿದೆ,” ಎಂದು ಬಿ.ವೈ. ವಿಜಯೇಂದ್ರ ಎಚ್ಚರಿಕೆ ನೀಡಿದರು.











