ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಲೋಪದೋಷಗಳು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಬಹುಭಾಷಾ ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಸೋಮವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ‘ಎದ್ದೇಳು ಕರ್ನಾಟಕ’ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಮತದಾರರ ವಿವರಗಳ ಪರಿಶೀಲನೆ ಹಾಗೂ ಅರ್ಹ ಮತದಾರರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಅತೀಕ್ ಅಹ್ಮದ್ ಉಪಸ್ಥಿತರಿದ್ದರು.
‘ಎದ್ದೇಳು ಕರ್ನಾಟಕ’ ಸಂಘಟನೆಯ ತಾರಾ ರಾವ್, ನೂರ್ ಶ್ರೀಧರ್, ಕರ್ನಾಟಕ ಮುಸ್ಲಿಂ ಮುತ್ತಹಿದ ಮಹಾಜ್ ಸಂಘಟನೆಯ ಮೊಹಮ್ಮದ್ ಯೂಸುಫ್ ಕನ್ನಿ, ತಫೀಮುಲ್ಲ ಮಾರುಫ್, ‘ನಮ್ಮ ಮತ ನಮ್ಮ ಹಕ್ಕು ವೇದಿಕೆ’ಯ ವಿನಯ್ ಶ್ರೀನಿವಾಸ್, ಐಶ್ವರ್ಯ, ಸುನಿಲ್ ಸಿರಸಂಗಿ, ನಾಗರಿಕ ಮತ ಕಾವಲು ಸಮಿತಿಯ ಕೆ.ಎಲ್. ಅಶೋಕ್, ಆಶೀರ್ವಾದ್ ಸಂಘಟನೆಯ ಫಾ. ಅರುಣ್ ಲೂಯಿಸ್, ಎಂಎಸ್‌ಸಿ ಸಂಘಟನೆಯ ಸೈಯದ್ ತೌಸಿಫ್ ಮಸೂದ್, ಮೊಹಮ್ಮದ್ ಇಸ್ಮಾಯಿಲ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ವಿವಿಧ ಲೋಪದೋಷಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಮುಖಂಡರು, ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿ ಹಾಗೂ ಜನಸ್ನೇಹಿಯಾಗಿ ನಡೆಸುವ ಅಗತ್ಯದ ಬಗ್ಗೆ ಚರ್ಚಿಸಿದರು. ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಮತದಾನದ ಹಕ್ಕಿಗೆ ಸಂಬಂಧಿಸಿದ ಯಾವುದೇ ಗೊಂದಲಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಯಿತು.
ಈ ವೇಳೆ ಎಸ್‌ಐಆರ್‌ಗೆ ಸಂಬಂಧಿಸಿದ ಸಾರ್ವಜನಿಕರ ಆತಂಕಗಳು, ಪ್ರಕ್ರಿಯೆಯಲ್ಲಿನ ಸಮಸ್ಯೆಗಳು ಮತ್ತು ಅವುಗಳ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು.











