ನವದೆಹಲಿ: ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ವಲಯವನ್ನು 2040ರ ವೇಳೆಗೆ 1 ಟ್ರಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ವಲಯವನ್ನಾಗಿ ರೂಪಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಕುರಿತ ಜಾಗತಿಕ ಸಿಇಒ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಜಾಗತಿಕ ಹಾಗೂ ಭಾರತೀಯ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಉದ್ಯಮದ ಪ್ರಮುಖರು ಭಾಗವಹಿಸಿ, ವಲಯದ ಭವಿಷ್ಯದ ಬೆಳವಣಿಗೆ, ಹೂಡಿಕೆ ಅವಕಾಶಗಳು, ತಂತ್ರಜ್ಞಾನ, ಉತ್ಪಾದನಾ ಸಾಮರ್ಥ್ಯ ವೃದ್ಧಿ ಹಾಗೂ ಜಾಗತಿಕ ಸ್ಪರ್ಧಾತ್ಮಕತೆಯ ಕುರಿತು ಚರ್ಚಿಸಿದರು.
ಭಾರತದ ಕೈಗಾರಿಕಾ ಬೆಳವಣಿಗೆಯಲ್ಲಿ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ವಲಯ ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಂದಿನ ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ, ನವೀನ ತಂತ್ರಜ್ಞಾನ ಮತ್ತು ಸುಸ್ಥಿರ ಉತ್ಪಾದನೆಗೆ ಒತ್ತು ನೀಡುವ ಅಗತ್ಯವಿದೆ ಎಂದು ನಡ್ಡಾ ಅಭಿಪ್ರಾಯಪಟ್ಟರು.

ಜಾಗತಿಕ ಉದ್ಯಮದೊಂದಿಗೆ ಸಹಭಾಗಿತ್ವ ಹೆಚ್ಚಿಸುವ ಮೂಲಕ ದೇಶೀಯ ಉತ್ಪಾದನಾ ಸಾಮರ್ಥ್ಯವನ್ನು ಬಲಪಡಿಸುವುದು, ಆಮದು ಅವಲಂಬನೆ ಕಡಿಮೆ ಮಾಡುವುದು ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ @ 2047’ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ವಲಯದ ಕೊಡುಗೆ ಮಹತ್ವದ್ದಾಗಿದೆ. ಉದ್ಯಮ ಮತ್ತು ಸರ್ಕಾರದ ಸಹಯೋಗದ ಮೂಲಕ ಈ ಕ್ಷೇತ್ರವನ್ನು ಮತ್ತಷ್ಟು ಬಲಿಷ್ಠ, ಸ್ಪರ್ಧಾತ್ಮಕ ಹಾಗೂ ಸುಸ್ಥಿರ ವಲಯವನ್ನಾಗಿ ರೂಪಿಸುವ ಉದ್ದೇಶವನ್ನು ಸಭೆ ಪ್ರತಿಬಿಂಬಿಸಿತು.
2040ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗುರಿ ಸಾಧಿಸುವ ನಿಟ್ಟಿನಲ್ಲಿ ನೀತಿ ಬೆಂಬಲ, ಹೂಡಿಕೆ, ಸಂಶೋಧನೆ ಮತ್ತು ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ಹಾಗೂ ತಂತ್ರಜ್ಞಾನ ಆಧಾರಿತ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವ ಕುರಿತು ಉದ್ಯಮದ ಪ್ರಮುಖರೊಂದಿಗೆ ಸಚಿವರು ಚರ್ಚಿಸಿದರು.
ಭಾರತದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ಅಗತ್ಯಗಳಿಗೆ ಅನುಗುಣವಾಗಿ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಕ್ಷೇತ್ರದ ಸಾಮರ್ಥ್ಯವನ್ನು ವಿಸ್ತರಿಸುವುದು ‘ವಿಕಸಿತ ಭಾರತ’ ನಿರ್ಮಾಣದ ಪ್ರಮುಖ ಅಂಶವಾಗಲಿದೆ ಎಂದು ಸಭೆಯಲ್ಲಿ ಒತ್ತಿಹೇಳಲಾಯಿತು.











