ಬೆಂಗಳೂರು: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಸ್ಪಷ್ಟ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ನನಗಿರುವ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ಕಸ್ತೂರಿ ರಂಗನ್ ವರದಿ ಜಾರಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವನ್ನು ಅಂತಿಮ ಅಧಿಸೂಚನೆ ಹೊರಡಿಸುವ ತೀರ್ಮಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ. ಅಧಿಸೂಚನೆ ಹೊರಡಿಸಿದ ನಂತರ ಅದನ್ನು ತನ್ನ ಗಮನಕ್ಕೆ ತರುವಂತೆ ಹೇಳಿದೆ. ಆದರೆ, ಮಂಡಳಿಯು ಪಶ್ಚಿಮಘಟ್ಟವನ್ನು ಹಂಚಿಕೊಂಡಿರುವ ರಾಜ್ಯಗಳ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ” ಎಂದು ಹೇಳಿದರು.
“ಕಸ್ತೂರಿ ರಂಗನ್ ಸಮಿತಿಯು ಮಾಡಿರುವ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಗಳ ಶಿಫಾರಸ್ಸನ್ನು ನಾವು ಅಗೌರವಿಸುತ್ತಿಲ್ಲ. ಬದಲಾಗಿ, ಅದನ್ನು ನಮ್ಮ ರಾಜ್ಯದ ಹಿತದೃಷ್ಟಿಯಿಂದ ವೈಜ್ಞಾನಿಕ ಹಾದಿಯಲ್ಲಿ ಪರಿಷ್ಕರಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ” ಎಂದು ಸಿಎಂ ಸ್ಪಷ್ಟಪಡಿಸಿದರು.
ಡ್ರೋನ್ ಸರ್ವೇ ಮಾಡಿಸಿದರೆ ಎಲ್ಲವೂ ಹಸಿರಾಗಿ ಕಾಣುತ್ತದೆ ಎನ್ನುವ ವಿಚಾರ ಸದನದಲ್ಲಿ ಪ್ರತಿಧ್ವನಿಸಿದೆ. ಹಾಗಾಗಿ, ರೆವಿನ್ಯೂ ಇಲಾಖೆಯ ಮೂಲಕ ಸರ್ವೇ ಮಾಡಿಸಬೇಕಾಗುತ್ತದೆ ಎಂದೂ ಅವರು ತಿಳಿಸಿದರು.











