ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸರಾವ್ ಅವರ ನಿಧನದ ಸುದ್ದಿ ಭಾರತೀಯ ಚಿತ್ರರಂಗವನ್ನು ದುಃಖದಲ್ಲಿ ಮುಳುಗಿಸಿದೆ. ಹಲವಾರು ಸದಭಿರುಚಿಯ ಸಿನಿಮಾಗಳನ್ನು ನೀಡಿದ ಅವರ ಅಗಲಿಕೆ ಅತ್ಯಂತ ನೋವುಂಟು ಮಾಡುವಂತಿದೆ ಎಂದು ಡಾ. ಜಿ. ಪರಮೇಶ್ವರ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಡಾ. ರಾಜ್‌ಕುಮಾರ್ ಅವರ ಅಭಿನಯದ ‘ಹಾಲು ಜೇನು’, ‘ಚಲಿಸುವ ಮೋಡಗಳು’, ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಅವರು ಅಚ್ಚಳಿಯದ ಛಾಪು ಮೂಡಿಸಿದ್ದರು. ಕನ್ನಡ ಚಿತ್ರರಂಗದೊಂದಿಗೆ ಅವರು ಹೊಂದಿದ್ದ ಆತ್ಮೀಯ ನಂಟು ಮತ್ತು ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿದೆ.
ದಶಕಗಳ ಕಾಲ ತಮ್ಮ ಸೃಜನಶೀಲತೆ, ವಿಭಿನ್ನ ಪ್ರಯೋಗಗಳು ಮತ್ತು ವಿಶಿಷ್ಟ ಕಥನಶೈಲಿಯಿಂದ ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡ ಸಿಂಗೀತಂ ಶ್ರೀನಿವಾಸರಾವ್ ಅವರ ಅಗಲಿಕೆಯಿಂದ ಬಣ್ಣದಲೋಕ ಬಡವಾಗಿದೆ ಎಂದು ಡಾ. ಪರಮೇಶ್ವರ ಅವರು ಹೇಳಿದ್ದಾರೆ.
ಭಗವಂತನು ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳ ವರ್ಗಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.










