ಹಾಸನ: ವಿಶ್ವಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರೋತ್ಸವವನ್ನು ಮಿತವ್ಯಯದಲ್ಲಿಯೇ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದರು. ಭಕ್ತರಿಗೆ ಸುಗಮ, ಸುರಕ್ಷಿತ ಹಾಗೂ ತ್ವರಿತ ದರ್ಶನ ಕಲ್ಪಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.
ಹಾಸನ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ನಡೆದ ಜಾತ್ರೋತ್ಸವದ ಎರಡನೇ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಕ್ಟೋಬರ್ 29ರಿಂದ ಪ್ರಾರಂಭವಾಗಲಿರುವ ಉತ್ಸವಕ್ಕೆ ಸಕಲ ಸಿದ್ಧತೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ಟೆಂಡರ್ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಸಾರ್ವಜನಿಕವಾಗಿ ಟೆಂಡರ್‌ಗಳನ್ನು ಕರೆಯಲಾಗಿದೆ. ಕುಡಿಯುವ ನೀರು, ಮಜ್ಜಿಗೆ ವಿತರಣೆ, ನೆರಳಿನ ವ್ಯವಸ್ಥೆ ಸೇರಿದಂತೆ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ನಾಲ್ಕು-ಐದು ಹೆಚ್ಚುವರಿ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಸಾರ್ವಜನಿಕರು ಗಂಟೆಗಟ್ಟಲೆ ಸರದಿಯಲ್ಲಿ ನಿಂತು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬ ಉದ್ದೇಶದಿಂದ ಈ ಬಾರಿ ಸಾರ್ವಜನಿಕ ಭಕ್ತರಿಗೆ ಮೊದಲ ಆದ್ಯತೆ ನೀಡಲಾಗುವುದು. ದರ್ಶನದ ಪಾಸ್‌ಗಳ ಸಂಖ್ಯೆಯನ್ನು ಕಡಿಮೆಗೊಳಿಸಿ, ಗಣ್ಯರ ದರ್ಶನಕ್ಕೂ ನಿಗದಿತ ಸಮಯದ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು. ಪುಟ್ಟ ಮಕ್ಕಳೊಂದಿಗೆ ಬರುವ ಮಹಿಳೆಯರಿಗೆ ಪ್ರತ್ಯೇಕ ಸರತಿ ಸಾಲು ವ್ಯವಸ್ಥೆ ಮಾಡುವ ಬಗ್ಗೆ ಚರ್ಚಿಸಲಾಗಿದ್ದು, ಭಕ್ತರ ಅನುಕೂಲಕ್ಕೆ ತಕ್ಕಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಜಾತ್ರೋತ್ಸವದ ಸಂದರ್ಭದಲ್ಲಿ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ, ದಾಸೋಹ, ವಿದ್ಯುತ್ ಪೂರೈಕೆ, ವಾಹನ ನಿಲುಗಡೆ ಹಾಗೂ ಸಂಚಾರ ನಿರ್ವಹಣೆಯಂತಹ ಮೂಲಸೌಕರ್ಯಗಳು ಸಮರ್ಪಕವಾಗಿ ಲಭ್ಯವಾಗುವಂತೆ ಕ್ರಮ ವಹಿಸಲಾಗುವುದು. ಜನದಟ್ಟಣೆ ನಿಯಂತ್ರಣ, ಸರತಿ ಸಾಲುಗಳ ನಿರ್ವಹಣೆ ಮತ್ತು ಪೊಲೀಸ್ ಭದ್ರತೆಯನ್ನು ಸಮನ್ವಯದಿಂದ ಕೈಗೊಂಡು ದರ್ಶನ ವ್ಯವಸ್ಥೆಯನ್ನು ಸುಗಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಹಣಕಾಸು ನಿರ್ವಹಣೆಯಲ್ಲಿಯೂ ಪಾರದರ್ಶಕತೆಗೆ ಆದ್ಯತೆ ನೀಡಲಾಗುವುದು. ಅನಗತ್ಯ ದುಂದು ವೆಚ್ಚಕ್ಕೆ ಅವಕಾಶ ನೀಡದೆ, ಸಾರ್ವಜನಿಕರ ಸಹಕಾರದೊಂದಿಗೆ ಉತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು. ಕುಡಿಯುವ ನೀರು ಮತ್ತು ಮಜ್ಜಿಗೆ ವಿತರಣೆಗೆ ಸ್ಕೌಟ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳನ್ನು ನೇಮಿಸಲಾಗಿದ್ದು, ಹೆಚ್ಚುವರಿ ವೆಚ್ಚ ತಪ್ಪಿಸಲು ಎಚ್ಚರಿಕೆ ವಹಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕಾಗಿ ಯಾವುದೇ ಹಣ ವ್ಯಯಿಸುತ್ತಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಹಾಸನಾಂಬ ಜಾತ್ರೋತ್ಸವವು ಜಿಲ್ಲೆಯ ಧಾರ್ಮಿಕ ಪರಂಪರೆ ಮತ್ತು ಸಾಂಸ್ಕೃತಿಕ ವೈಭವದ ಪ್ರತೀಕ. ಪ್ರತಿಯೊಬ್ಬ ಭಕ್ತರೂ ಅನಗತ್ಯ ಕಾಯುವಿಕೆ ಮತ್ತು ಗೊಂದಲವಿಲ್ಲದೆ ದರ್ಶನ ಪಡೆದು ತೃಪ್ತಿಯಿಂದ ಮರಳುವಂತಾಗಬೇಕು ಎಂಬುದೇ ಉತ್ಸವದ ಮುಖ್ಯ ಆಶಯ. ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜಾತ್ರೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಸಚಿವರು ಒತ್ತಿ ಹೇಳಿದರು.
ಸಭೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಲತಾಕುಮಾರಿ ಮತ್ತಿತರರು ಉಪಸ್ಥಿತರಿದ್ದರು.











