ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವೀಡಿಯೋಗೆ ತಮ್ಮ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇದು ರಾಜಕೀಯ ದುರುದ್ದೇಶದಿಂದ ತಮ್ಮ ಚಾರಿತ್ರ್ಯಹನನ ಮಾಡುವ ಪ್ರಯತ್ನವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಸ್ಟಿಂಗ್ ಆಪರೇಷನ್ ವೀಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ಸಿದ್ಧರಾಮಯ್ಯ, ಕೆಲವು ಕಿಡಿಗೇಡಿಗಳು ಇದನ್ನು ಬಳಸಿಕೊಂಡು ತಮ್ಮ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಹೆಸರಿನ ಉಲ್ಲೇಖವಿರುವ ಈ ವೀಡಿಯೋವನ್ನು ಯಾವುದೇ ಪತ್ರಿಕೆ, ಚಾನಲ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದನ್ನು ತಡೆಹಿಡಿಯಬೇಕು ಎಂದು ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ತಾವು ಸಂಪೂರ್ಣ ನಿರಪರಾಧಿ ಎಂಬುದು ತಮ್ಮ ಆತ್ಮಸಾಕ್ಷಿಗೆ ತಿಳಿದಿದೆ ಎಂದು ಹೇಳಿದ ಅವರು, ತೆರೆದ ಪುಸ್ತಕದಂತಿರುವ ಐದು ದಶಕಗಳ ರಾಜಕೀಯ ಜೀವನದ ಅರಿವು ಇರುವ ರಾಜ್ಯದ ಜನತೆಗೂ ಇದು ಗೊತ್ತಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವಾಗಿ ಬಿಂಬಿಸುವುದು ಸುಲಭವಾಗಿದೆ ಎಂದು ಗಮನಿಸಿದ ಅವರು, ಮುನ್ನೆಚ್ಚರಿಕೆಯ ಕ್ರಮವಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದೇನೆ ಹೊರತು ಯಾವುದೇ ಭಯವಿಲ್ಲ ಎಂದು ತಿಳಿಸಿದ್ದಾರೆ. ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎಂಬ ವಿಶ್ವಾಸವೂ ತಮಗಿದೆ ಎಂದು ಅವರು ಹೇಳಿದ್ದಾರೆ.
ತಾವು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿರುವವರು ಎಂದು ಸ್ಪಷ್ಟಪಡಿಸಿದ ಸಿದ್ಧರಾಮಯ್ಯ, ಇಲ್ಲಿಯವರೆಗಿನ ತಮ್ಮ ರಾಜಕೀಯ ಜೀವನದಲ್ಲಿ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಎಂದೂ ಅಡ್ಡಿಪಡಿಸಿಲ್ಲ ಎಂದು ನೆನಪಿಸಿದ್ದಾರೆ. ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ-ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಸ್ಟಿಂಗ್ ಆಪರೇಷನ್ ವೀಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಈಗಾಗಲೇ ದೂರು ನೀಡಿದ್ದಾರೆ ಎಂದು ತಿಳಿಸಿದ ಅವರು, ಆ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲಿಯವರೆಗೆ ಮಾಧ್ಯಮಗಳು ಮಾತ್ರವಲ್ಲ, ಸಾರ್ವಜನಿಕರೂ ಕೂಡ ಅನಗತ್ಯವಾಗಿ ಇಂತಹ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕು ಎಂದು ಅವರು ಕೋರಿದ್ದಾರೆ.











