ಬೆಂಗಳೂರು: ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಬುಧವಾರ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಯ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯು ರಾಜ್ಯದಲ್ಲಿ ಸ್ಥಾಪನೆಯಾದ ಮೊದಲ ಪ್ರಾಣಿ ಲಸಿಕಾ ಸಂಸ್ಥೆಯಾಗಿದ್ದು, ರಾಜ್ಯದಾದ್ಯಂತ ಇರುವ ಜಾನುವಾರುಗಳಿಗೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಲಸಿಕೆಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗದ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೋಗ ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅವರು ತಿಳಿಸಿದರು. ರೋಗ ನಿಯಂತ್ರಣಕ್ಕೆ ಅಗತ್ಯವಿರುವ ಲಸಿಕೆ, ಔಷಧೋಪಚಾರ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಯಾವುದೇ ನಿರ್ಲಕ್ಷ್ಯ ತೋರದೆ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಇಲಾಖೆಯ ಆಯುಕ್ತ ಲಿಂಗರಾಜು, ಸಂಸ್ಥೆಯ ನಿರ್ದೇಶಕ ರತ್ನಂ, ಸಚಿವರ ಆಪ್ತ ಕಾರ್ಯದರ್ಶಿ ಡಾ. ರಾಜೀವ್ ಕೂಲೇರ್ ಸೇರಿದಂತೆ ಸಂಸ್ಥೆಯ ಅಧಿಕಾರಿಗಳು ಹಾಗೂ ಇಲಾಖೆಯ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.

ಸಮಯಪಾಲನೆಗೆ ಕಡ್ಡಾಯ ಸೂಚನೆ
ಇದೇ ಸಂದರ್ಭದಲ್ಲಿ ಸಚಿವರು ನಗರದ ಹೆಬ್ಬಾಳದಲ್ಲಿರುವ ಉಪ ನಿರ್ದೇಶಕರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕಚೇರಿಗೆ ದಿಢೀರ್ ಭೇಟಿ ನೀಡಿದರು. ಉಪ ನಿರ್ದೇಶಕ ಡಾ. ಪರಮೇಶ್ವರ ಕೆ.ಟಿ. ಅವರು ಸರಿಯಾದ ಸಮಯಕ್ಕೆ ಹಾಜರಾಗದ ಕಾರಣ ಅವರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಇನ್ನು ಮುಂದೆ ಕಚೇರಿ ಸಿಬ್ಬಂದಿ ಸರಿಯಾದ ಸಮಯಕ್ಕೆ ಹಾಜರಾಗಿ ಸಾರ್ವಜನಿಕ ಸೇವೆ ಮಾಡಬೇಕು ಎಂದು ಸೂಚನೆ ನೀಡಿದರು.











