ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹಾಗೂ ದೇಶದ ಮೊದಲ ಮಹಿಳಾ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ನಂತರ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತೆ, ಏಕತೆ ಮತ್ತು ಸಾಮರಸ್ಯವನ್ನು ಎತ್ತಿಹಿಡಿಯುವ ಪ್ರತಿಜ್ಞಾ ವಿಧಿಯನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಬೋಧಿಸಿದರು.

ದೇಶದ ಏಕತೆ, ಸಮಗ್ರತೆ ಮತ್ತು ಸಹೋದರತ್ವದ ಮೌಲ್ಯಗಳನ್ನು ಸ್ಮರಿಸುವ ಉದ್ದೇಶದಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸಲಾಗುತ್ತದೆ. ಇಂದಿರಾಗಾಂಧಿ ಅವರ ಜನ್ಮದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಐಕ್ಯತೆಯ ಮಹತ್ವವನ್ನು ಸಾರಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.










