ಅರ್ಹ ರೈತರಿಗೆ ಬರ ಪರಿಹಾರ ತ್ವರಿತವಾಗಿ ತಲುಪಿಸಲು ಕಟ್ಟುನಿಟ್ಟಿನ ಸೂಚನೆ; 15 ಲಕ್ಷ ನಿವೇಶನ ವಿತರಣೆಗೆ ವಿಶೇಷ ಆದ್ಯತೆ
ಬೆಂಗಳೂರು: ಸರ್ಕಾರದ ವಿವಿಧ ಯೋಜನೆಗಳು ನಿಗದಿತ ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಪ್ರಯೋಜನ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಆಡಳಿತದಲ್ಲಿ ನಿರ್ಲಕ್ಷ್ಯ ಮತ್ತು ಅನಗತ್ಯ ವಿಳಂಬವನ್ನು ಸಹಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ಅವರು ಶುಕ್ರವಾರ ವಿಕಾಸಸೌಧದಲ್ಲಿ ಕಂದಾಯ ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಗಳ ವಿಷಯಗಳ ಕುರಿತು ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
‘ಪ್ರಗತಿ ವರದಿಗಳಿಗಿಂತ ಜನರಿಗೆ ಯೋಜನೆಗಳ ನೈಜ ಪ್ರಯೋಜನ ತಲುಪುವುದು ಮುಖ್ಯ. ಕೆಲವು ಜಿಲ್ಲೆಗಳು ಉತ್ತಮ ಕಾರ್ಯಕ್ಷಮತೆ ತೋರಿದ್ದರೆ, ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಕಾರಣಗಳನ್ನು ಪರಿಶೀಲಿಸಿ ಸಮಸ್ಯೆಗಳನ್ನು ಪರಿಹರಿಸಿ, ನಿಗದಿತ ಅವಧಿಯಲ್ಲಿ ಗುರಿ ಸಾಧಿಸಬೇಕು’ ಎಂದು ಅವರು ಸೂಚಿಸಿದರು.

ಬರ ಪರಿಹಾರ ವಿತರಣೆಯಲ್ಲಿ ವಿಳಂಬ ಸಲ್ಲದು
ಸೂಪರ್ ಎಲ್‌ನಿನೋ ಪರಿಣಾಮದಿಂದ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಉಂಟಾಗಿದೆ. ಯಾವುದೇ ಜಿಲ್ಲೆಯಲ್ಲೂ ಉತ್ತಮ ಬೆಳೆ ಬಂದಿರುವ ವರದಿಗಳಿಲ್ಲ. ಹಿಂಗಾರು ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಡಾ. ಪರಮೇಶ್ವರ ಹೇಳಿದರು.
ಬರದಿಂದ ಬಳಲುತ್ತಿರುವ ಅರ್ಹ ಪ್ರತಿ ರೈತರಿಗೆ ₹5,000 ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಘೋಷಣೆಯಾದ ಎರಡು ತಿಂಗಳು ಕಳೆದರೂ ಕೆಲವು ಜಿಲ್ಲೆಗಳಲ್ಲಿ ಪರಿಹಾರ ವಿತರಣೆ ಪೂರ್ಣಗೊಂಡಿಲ್ಲ. ರೈತರ ಖಾತೆಗಳಿಗೆ ಹಣ ಜಮೆಯಾಗದಿರುವುದು ಸರಿಯಲ್ಲ ಎಂದು ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
‘ಸರ್ಕಾರದ ಘೋಷಣೆಗಳು ಕೇವಲ ಪ್ರಕಟಣೆಗಳಿಗೆ ಸೀಮಿತವಾಗಬಾರದು. ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗೆ ಯಾವುದೇ ವಿಳಂಬವಿಲ್ಲದೆ ಹಣ ತಲುಪಿಸಲು ತಕ್ಷಣ ಕ್ರಮ ಕೈಗೊಳ್ಳಿ’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ವ್ಯವಸ್ಥೆಗೆ ವಿಶೇಷ ಗಮನಹರಿಸಬೇಕು. ಮೇವಿನ ಬೀಜದ ಕಿಟ್‌ಗಳ ವಿತರಣೆಗಾಗಿ ಹೆಚ್ಚುವರಿ ₹30 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

15 ಲಕ್ಷ ನಿವೇಶನಗಳಿಗೆ ವಿಶೇಷ ಆದ್ಯತೆ
ಬಡವರಿಗೆ ಶಾಶ್ವತ ಸೂರು ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆ. ಮುಖ್ಯಮಂತ್ರಿಗಳ ಆಶಯದಂತೆ 15 ಲಕ್ಷ ನಿವೇಶನಗಳನ್ನು ಒದಗಿಸುವ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈಗಾಗಲೇ ಸುಮಾರು 24 ಸಾವಿರ ಎಕರೆ ಜಮೀನು ಗುರುತಿಸಲಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸುವುದು, ಜಮೀನಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಮತ್ತು ನಿವೇಶನ ವಿತರಣೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಸೂಚಿಸಿದರು.
ರಾಜ್ಯದಲ್ಲಿ ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿದೆ. ಅರ್ಹರು ವಂಚಿತರಾಗದಂತೆ ಮತ್ತು ಅನರ್ಹರಿಗೆ ಸೌಲಭ್ಯ ದೊರೆಯದಂತೆ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಡಾ. ಪರಮೇಶ್ವರ ನಿರ್ದೇಶನ ನೀಡಿದರು.
ಸಭೆಯಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೃಷಿ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್‌ಚಂದ್ರ, ಕಂದಾಯ ಆಯುಕ್ತರು ಮೀನಾ ನಾಗರಾಜ್, ಭೂಮಾಪನ ಮತ್ತು ಭೂದಾಖಲೆಗಳ ಆಯುಕ್ತರು ರಾಕೇಶ್ ಕುಮಾರ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತೆ ಹೊನ್ನಾಂಬ, ಯುವಜನಸೇವಾ ಮತ್ತು ಕ್ರೀಡಾ ಆಯುಕ್ತರು ಎಂ.ಎನ್. ಅನುಚೇತ್ ಅವರು ಇದ್ದರು.











