ಯುವಕರು ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಬೆಳೆಸಿಕೊಳ್ಳಬೇಕು; ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ₹50 ಕೋಟಿ ವಿಶೇಷ ಅನುದಾನ ನೀಡಲು ಸರ್ಕಾರದ ಮನವೊಲಿಸುವ ಭರವಸೆ
ಬೆಂಗಳೂರು: ರಾಜ್ಯದಲ್ಲಿ ಹೇರಳ ಉದ್ಯೋಗಾವಕಾಶಗಳಿದ್ದು, ಅವುಗಳಿಗೆ ತಕ್ಕಂತೆ ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲದ ಕೊರತೆಯಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಭಾನುವಾರ ಆಯೋಜಿಸಿದ್ದ ‘ವಿಶ್ವಮಿತ್ರ ಪ್ರತಿಭಾ ಪುರಸ್ಕಾರ’ ಸಮಾರಂಭದಲ್ಲಿ ಮಾತನಾಡಿದ ಅವರು, ಹಲವು ಕಂಪನಿಗಳ ಮಾಲೀಕರು ಅನುಭವ ಹೊಂದಿರುವ ಹಾಗೂ ಕೌಶಲ್ಯಪೂರ್ಣ ಸಿಬ್ಬಂದಿಯ ಅಗತ್ಯವಿದೆ ಎಂದು ತಿಳಿಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಲ್ಲ. ಆದರೆ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯವನ್ನು ಎಲ್ಲ ಸಮಾಜಗಳ ಯುವಕರು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಮಂಡಳಿಗೆ ₹50 ಕೋಟಿ ವಿಶೇಷ ಅನುದಾನ ನೀಡುವಂತೆ ಸರ್ಕಾರದ ಮನವೊಲಿಸುವುದಾಗಿ ಭರವಸೆ ನೀಡಿದರು.
ಮಾಜಿ ಸಚಿವ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಮಾತನಾಡಿ, ಬ್ರಾಹ್ಮಣ ಸಮಾಜದಲ್ಲಿ ಒಗ್ಗಟ್ಟು ಮೂಡಿದರೆ ಶಾಸನಸಭೆಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರತಿನಿಧಿಗಳನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯಾನಂತರದ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಎಲ್ಲರನ್ನು ಒಂದುಗೂಡಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಕ್ಕಾಗಿ ಸಮಾಜದ ಅನೇಕರು ಸಾಕಷ್ಟು ತ್ಯಾಗ ಮತ್ತು ಬಲಿದಾನ ಮಾಡಿದ್ದಾರೆ. ಅಲ್ಲದೆ, ಸಮಾಜದ ಹಲವರು ಐಎಎಸ್, ಐಪಿಎಸ್ ಮತ್ತು ಐಆರ್ಎಸ್ ಅಧಿಕಾರಿಗಳಾಗಿ ಆಡಳಿತ ವ್ಯವಸ್ಥೆಗೆ ದೀರ್ಘಕಾಲ ತಮ್ಮ ಸೇವೆ ಸಲ್ಲಿಸಿದ್ದಾರೆ. ಯುವಜನರ ಸಾಧನೆ ರಾಷ್ಟ್ರದ ಅಭಿವೃದ್ಧಿಗೆ ದೊಡ್ಡ ಶಕ್ತಿಯಾಗಲಿದೆ ಎಂದು ತಿಳಿಸಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಮಾತನಾಡಿ, ವಿದ್ಯೆ ಮತ್ತು ವಿದ್ವತ್ತು ಬ್ರಾಹ್ಮಣ ಸಮುದಾಯದ ಪ್ರಮುಖ ಆಸ್ತಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಅತ್ಯಧಿಕ ಅಂಕ ಗಳಿಸಿ ಸಾಧನೆ ಮಾಡಿದ 132 ವಿದ್ಯಾರ್ಥಿಗಳಿಗೆ ವಿಶ್ವಮಿತ್ರ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನಿಕಟಪೂರ್ವ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರವಿ ಎಂ. ತಿರ್ಲಾಪುರ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ಕೆ. ದೀಪಶ್ರೀ, ನಿರ್ದೇಶಕರಾದ ಗುರುರಾಜ ವಾದಿರಾಜ ಬಳಗನೂರು, ಮಾಲತೇಶ್, ನಾಗೇಶ್, ಕಶ್ಯಪ್ ನಂದನ್, ಶ್ರೀನಿವಾಸ ಮೂರ್ತಿ, ಬೆಳ್ಳೂರು ಶ್ರೀಧರ್, ಡಾ. ಜಗದೀಶ್ ಹಾಗೂ ವೆಂಕೂಬ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.











